ಚಾಮರಾಜನಗರ: ಕಳೆದ ಹದಿನೈದು ದಿನಗಳ ಹಿಂದೆ ಚಾಮರಾಜನಗರದಲ್ಲಿ ಕೊರೊನಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ಕೊರತೆಯಿಂದ ಸೋಂಕಿತರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಸೂಚನೆಯಂತೆ ಮುಂದಿನ ವಿಚಾರಣೆಯ ವೇಳೆಗೆ ರಾಜ್ಯ ಸರ್ಕಾರ ಕ್ರಮವಹಿಸಿದ ಬಗ್ಗೆ ತನ್ನ ನಿಲುವು ತಿಳಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಚಾಮರಾಜನಗರದಲ್ಲಿ ಹೇಳಿದರು.

ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೋವಿಡ್ ಕೇರ್ ಸೆಂಟರ್‍ಗಳಿಗೆ ಭೇಟಿ ನೀಡಿ, ಕೋವಿಡ್ ಸೋಂಕಿತರ ಚಿಕಿತ್ಸೆ ಬಗ್ಗೆ ಮಾಹಿತಿ ಪಡೆದ ಬಳಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿನ ಆಕ್ಸಿಜನ್ ಕೊರತೆಯಿಂದ ಅಮಾಯಕರು ಸಾವನ್ನಪ್ಪಿದ ಘಟನೆ ನಡೆದು ಹದಿನೈದು ದಿನಗಳಾಗಿದೆ. ನ್ಯಾಯಾಂಗ ತನಿಖೆಯೂ ಸಹ ನಡೆದಿದೆ, ಹೈ ಕೋರ್ಟ್‍ನಲ್ಲಿ ಪ್ರಕರಣ ದಾಖಲಾಗಿ ವಿಚಾರಣೆ ನಡೆಯುವ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ಹೇಳಿದರು.

ಹೈ ಕೋರ್ಟ್ ಈಗಾಗಲೇ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದು, ಮುಂದಿನ ವಿಚಾರಣೆಯ ವೇಳೆಗೆ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ ಪ್ರಕರಣದ ತಪ್ಪಿತಸ್ಥರಿಗೆ ಕ್ರಮ ಹಾಗೂ ಮೃತ ಕುಟುಂಬಗಳಿಗೆ ಪರಿಹಾರವನ್ನು ನೀಡುವ ಬಗ್ಗೆ ಸರ್ಕಾರದ ನಿರ್ಧಾರವನ್ನು ತಿಳಿಸುವಂತೆ ಸೂಚನೆ ನೀಡಿದೆ. ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದು, ಮೃತ ಕುಟುಂಬಗಳಿಗೆ ಯಾವ ರೀತಿಯಲ್ಲಿ ಪರಿಹಾರ ನೀಡಬಹುದೆಂದು ತಿಳಿಸಿದ್ದೇನೆ. ಸದ್ಯದಲ್ಲಿ ಸರ್ಕಾರ ಹೈ ಕೋರ್ಟ್‍ಗೆ ತನ್ನ ನಿಲುವನ್ನು ತಿಳಿಸಲಿದೆ ಎಂದಿದ್ದಾರೆ.

ಹನೂರು ತಾಲ್ಲಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಿಗೆ ಭೇಟಿ ನೀಡಿದ್ದು, ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರ ಬಳಿಯೂ ಸಹ ಚರ್ಚೆ ನಡೆಸಿದ್ದೇವೆ. ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗಬೇಕು ಹಾಗೂ ಸಾವಿನ ಪ್ರಮಾಣವೂ ಸಹ ಕಡಿಮೆಯಾಗ ಬೇಕು. ಎಲ್ಲಾ ಕ್ರಮವನ್ನು ವಹಿಸಲು ರಾಜ್ಯ ಸರ್ಕಾರ ಸಿದ್ದವಿದೆ ಎಂದರು. ಹನೂರು ಶಾಸಕ ಆರ್. ನರೇಂದ್ರ ಹಾಗೂ ವೈದ್ಯರುಗಳು ಸಚಿವರೊಂದಿಗೆ ಹಾಜರಿದ್ದರು.

The post ಆಕ್ಸಿಜನ್ ದುರಂತಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್‍ಗೆ ಮುಂದಿನ ವಿಚಾರಣೆ ವೇಳೆಗೆ ಸರ್ಕಾರ ನಿಲುವು ತಿಳಿಸಲಿದೆ: ಸುರೇಶ್ ಕುಮಾರ್ appeared first on Public TV.

Source: publictv.in

Source link