ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕು ಪತ್ತೆ: ಗೃಹಕಚೇರಿಯಲ್ಲಿ ತುರ್ತು ಸಭೆ ಕರೆದ ಸಿಎಂ ಬಸವರಾಜ ಬೊಮ್ಮಾಯಿ | Karnataka CM Basavaraj Bommai Calls For Emergency Meeting to discuss Omicron Infection


ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕು ಪತ್ತೆ: ಗೃಹಕಚೇರಿಯಲ್ಲಿ ತುರ್ತು ಸಭೆ ಕರೆದ ಸಿಎಂ ಬಸವರಾಜ ಬೊಮ್ಮಾಯಿ

ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕದಲ್ಲಿ ಇಬ್ಬರಿಗೆ ಒಮಿಕ್ರಾನ್​ ಸೋಂಕು ದೃಡಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ (ನ.3) ಮಧ್ಯಾಹ್ನ 1 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ತುರ್ತು ಸಭೆ ಕರೆದಿದ್ದಾರೆ. ಕೊವಿಡ್-19 ನಿಯಂತ್ರಣ ಕ್ರಮಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ. ಕಂದಾಯ ಸಚಿವರು, ಆರೋಗ್ಯ ಸಚಿವರು, ಮುಖ್ಯ ಕಾರ್ಯದರ್ಶಿ, ಅಭಿವೃದ್ಧಿ ಆಯುಕ್ತರು, ಬಿಬಿಎಂಪಿ ಮುಖ್ಯ ಆಯುಕ್ತರು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಕೆಐಎಬಿ ಕೊವಿಡ್ ನೋಡಲ್ ಅಧಿಕಾರಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರ ಹಾಜರಿಗೆ ಸೂಚನೆ ನೀಡಲಾಗಿದೆ.

ಸಭೆಯಲ್ಲಿ ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರಿಗೂ ಹಾಜರಿರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಚೇರಿಯಿಂದ ಸೂಚನೆ ನೀಡಲಾಗಿದೆ.

ಕೊವಿಡ್ ಎದುರಿಸಿದ ರೀತಿ ಒಮಿಕ್ರಾನ್ ನಿಭಾಯಿಸುತ್ತೇವೆ: ಸಿಎಂ
ಕರ್ನಾಟಕದ ಇಬ್ಬರಿಗೆ ಒಮಿಕ್ರಾನ್ ರೂಪಾಂತರದ ಸೋಂಕು ದೃಢಪಟ್ಟಿರುವ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಒಮಿಕ್ರಾನ್ ಹರಡಿದ್ದರೂ ದೊಡ್ಡಮಟ್ಟದ ಆತಂಕವಿಲ್ಲ. ಕೇಂದ್ರ ಆರೋಗ್ಯ ಸಚಿವರೊಂದಿಗೆ ಈ ಕುರಿತು ಸ್ವತಃ ಚರ್ಚಿಸಿದ್ದೇನೆ. ಬೆಂಗಳೂರಿಗೆ ಹಿಂದಿರುಗಿದ ತಜ್ಞರ ಜತೆ ತುರ್ತು ಸಭೆ ಮಾಡಿ ಚರ್ಚೆ ನಡೆಸುತ್ತೇನೆ. ನಂತರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ. ಕರ್ನಾಟಕದ ಒಮಿಕ್ರಾನ್ ಸ್ಥಿತಿಗತಿಯ ಬಗ್ಗೆ ನಾಳೆ ಸಂಪೂರ್ಣ ವಿವರ ನೀಡುವುದಾಗಿ ಹೇಳಿದ್ದಾರೆ. ಕೊವಿಡ್ ಎದುರಿಸಿದ ರೀತಿಯಲ್ಲಿಯೇ ಒಮಿಕ್ರಾನ್ ಪರಿಸ್ಥಿತಿಯನ್ನೂ ನಿಭಾಯಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಇಬ್ಬರಿಗೆ ಒಮಿಕ್ರಾನ್ ದೃಢಪಟ್ಟಿದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯಾವುದೇ ವಿವರ ಸಿಕ್ಕಿಲ್ಲ. ನಮ್ಮ ಆರೋಗ್ಯ ಸಚಿವರು ಮತ್ತು ಮುಖ್ಯ ಕಾರ್ಯದರ್ಶಿಯೊಂದಿಗೆ ನಾನು ಚರ್ಚಿಸಿದೆ. ಕೇಂದ್ರ ಸರ್ಕಾರದಿಂದ ಅಗತ್ಯ ಮಾಹಿತಿ ಪಡೆಯಲು ಸೂಚಿಸಿದ್ದೇನೆ. ನಾಳೆ (ನ.3) ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿ ತಜ್ಞರ ಜತೆ ತುರ್ತು ಸಭೆ ನಡೆಯಲಿದೆ. ಹೈರಿಸ್ಕ್ ದೇಶಗಳ ಪ್ರಯಾಣಿಕರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು. ವಿಮಾನ ನಿಲ್ದಾಣಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ನುಡಿದರು.

ಒಮಿಕ್ರಾನ್ ಪ್ರಕರಣಗಳ ಕುರಿತು ಮಾಹಿತಿ ನೀಡಿರುವ ಕೇಂದ್ರ ಸರ್ಕಾರವು, ಕೊರೊನಾ ರೂಪಾಂತರದ ಸೋಂಕು ಪತ್ತೆಯಾಗಿರುವ ಇಬ್ಬರೂ ಕರ್ನಾಟಕದವರು ಎಂದಿದೆ. ಕೇಂದ್ರ ಸರ್ಕಾರದ ಪ್ರಮುಖರು ಮತ್ತು ತಜ್ಞರ ಜೊತೆ ಈ ಸಂಬಂಧ ಚರ್ಚೆ ಮಾಡಬೇಕಿದೆ. ಪೂರ್ಣ ವರದಿ ಬಂದ ಬಳಿಕ ಪರಿಸ್ಥಿತಿಯ ಯಥಾಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿ ಲಭ್ಯವಾಗಲಿದೆ. ವಿಮಾನ ನಿಲ್ದಾಣಗಳಲ್ಲಿ ಸೋಂಕಿತರ ತಪಾಸಣೆ ಮತ್ತು ಕ್ವಾರಂಟೈನ್ ಬಗ್ಗೆ ಮತ್ತಷ್ಟು ಮಾಹಿತಿ ಪಡೆದುಕೊಳ್ಳುವ ಅವಶ್ಯಕತೆ ಇದೆ. ಈ ವಿಚಾರದ ಬಗ್ಗೆ ತಜ್ಞರ ಜೊತೆ ಮಾತನಾಡಿ ತೀರ್ಮಾನ ಮಾಡಲಾಗುತ್ತದೆ ಎಂದರು. ಶಾಸಕ ಬಸನಗೌಡ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅವರು ನನ್ನ ಆತ್ಮೀಯರು. ಬೆಂಗಳೂರಿಗೆ ತೆರಳಿದ ಬಳಿಕ ಅವರೊಂದಿಗೆ ಮಾತನಾಡುತ್ತೇನೆ ಎಂದರು.

TV9 Kannada


Leave a Reply

Your email address will not be published. Required fields are marked *