ಮಡಿಕೇರಿ: ದುಬಾರೆಯಲ್ಲಿರುವ ಕುಶ ಆನೆಯನ್ನು ಮರಳಿ ಕಾಡಿಗೆ ಬಿಡುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಲಿಂಬಾವಳಿ ಸೂಚನೆ ನೀಡಿದ್ದಾರೆ.

ಕಳೆದ ವರ್ಷ ಸಾಕಾನೆ ಶಿಬಿರದಿಂದ ತಪ್ಪಿಸಿಕೊಂಡು ಹೋಗಿದ್ದ ಸಾಕಾನೆ ಕುಶಾ ಆನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಮಾವತರು ಸೆರೆಹಿಡಿದಿದ್ದು ದುಬಾರೆ ಅರಣ್ಯ ಪ್ರದೇಶಕ್ಕೆ ಕರೆ ತಂದಿದ್ದರು. ಆದರೆ ಇದೀಗಾ ಸಾಕಾನೆ ಕುಶನನ್ನು ಮರಳಿ ಕಾಡಿಗೆ ಬಿಡಲು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅರಣ್ಯಧಿಕಾರಿಗಳಿಗೆ ಆದೇಶಿಸಿದ್ದಾರೆ.

ಇಂದು ಈ ಸಂಬಂಧ ಸಚಿವ ಅರವಿಂದ ಲಿಂಬಾವಳಿ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಕಳೆದ ಒಂದು ವರ್ಷದಿಂದ ದುಬಾರೆ ಶಿಬಿರದಿಂದ ತಪ್ಪಿಸಿಕೊಂಡ ಆನೆ ಕುಶನನ್ನು ಸೆರೆ ಹಿಡಿದು ತರಲಾಗಿತ್ತು. ಆದರೆ ಕುಶ ಆನೆಯನ್ನು ಸೆರೆ ಹಿಡಿದು ಇಲಾಖೆಯಿಂದ ಹಿಂಸೆ ನೀಡಲಾಗುತ್ತಿದೆ ಎಂದು ಪ್ರಾಣಿಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಸಚಿವ ಅರವಿಂದ ಲಿಂಬಾವಳಿ ಇಂದು ಸಭೆ ನಡೆಸಿ ಮಾಹಿತಿ ಪಡೆದರು. ಅಧಿಕಾರಿಗಳು ಕುಶ ಆನೆಗೆ ಯಾವುದೇ ತರಹದ ಹಿಂಸೆ ನೀಡಿಲ್ಲ. ಕುಶ ಆನೆ ಆರೋಗ್ಯವಾಗಿದೆ ಎಂದು ಮಾಹಿತಿ ನೀಡಿದರು. ಅಂತಿಮವಾಗಿ ಸಚಿವರು ಕುಶ ಆನೆಗೆ ರೇಡಿಯೋ ಕಾಲರ್ ಅಳವಡಿಸಿ, ಬಿಡುಗಡೆ ಮಾಡಲು ಬಿಡುಗಡೆಗೆ ಸೂಕ್ತ ಸ್ಥಳ ನಿಗದಿ ಪಡಿಸಿದ ಮೇಲೆ, ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಬಿಡುಗಡೆ ಮಾಡಲು ಆದೇಶಿಸಿದರು.

ಇದೇ ಸಂದರ್ಭದಲ್ಲಿ ದುಬಾರೆ ಸಮೀಪ ಪ್ರಜ್ಞಾ ಚೌಟ ಎಂಬವರು ಆನೆಗಳನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡು ಪೋಷಿಸುತ್ತಿರುವ ಬಗ್ಗೆ ಸ್ಥಳೀಯರಿಂದ ವ್ಯಕ್ತವಾಗಿರುವ ಆಕ್ಷೇಪಣೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅವರ ಸುಪರ್ದಿಯಲ್ಲಿರುವ ಆನೆಗಳನ್ನು ಇಲಾಖೆ ವಶಕ್ಕೆ ಪಡೆಯುವ ಬಗ್ಗೆ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಸಭೆಯಲ್ಲಿ ಸಂಜಯ್ ಮೋಹನ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಅರಣ್ಯ ಪಡೆ ಮುಖ್ಯಸ್ಥರು ಮತ್ತು ವಿಜಯಕುಮಾರ್ ಗೋಗಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ,) ಹಾಗೂ ವನ್ಯಜೀವಿ ಪರಿಪಾಲಕರು ಭಾಗವಹಿಸಿದ್ದರು.

The post ಕುಶ ಆನೆಯನ್ನು ಮರಳಿ ಕಾಡಿಗೆ ಬಿಡಿ – ಅರಣ್ಯಧಿಕಾರಿಗಳಿಗೆ ಲಿಂಬಾವಳಿ ಸೂಚನೆ appeared first on Public TV.

Source: publictv.in

Source link