ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕಳೆದ ರಾತ್ರಿ ಆಕ್ಸಿಜನ್ ಕೊರತೆ ಉಂಟಾಗಿದ್ದು, ಅದರ ಬೆನ್ನಲ್ಲೇ 24 ರೋಗಿಗಳು ಸಾವನ್ನಪ್ಪಿದ್ದಾರೆ. ಈ ಪ್ರಕರಣದ ಕುರಿತು ಸಮಗ್ರ ತನಿಖೆ ಮಾಡಿ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್​ ಅವರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಇಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಹಮ್ಮಿಕೊಂಡಿದ್ದ ರಾಸಾಯನಿಕ ಸಿಂಪಡಣೆ ಕಾರ್ಯಕ್ರಮಕ್ಕೆ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದರು. ಬಳಿಕ ಚಾಮರಾಜನಗರ ಘಟನೆ ಕುರಿತು ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ ಅವರು, ಆಕ್ಸಿಜನ್ ಸಿಗದ ಹಿನ್ನೆಲೆಯಲ್ಲಿ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ‌. ಆದರೆ ಅವರ ಸಾವಿಗೆ ನಿಜವಾಗಿಯೂ ಏನು ಕಾರಣ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ ಎಂದರು. ಇದು ಅತ್ಯಂತ ದುಃಖಕರ ಸಂಗತಿ. ಈ ಘಟನೆ ಸಂಭವಿಸಬಾರದಾಗಿತ್ತು ಎಂದು ಬೊಮ್ಮಾಯಿ ವಿಷಾದ ವ್ಯಕ್ತಪಡಿಸಿದರು.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣದ ಕುರಿತು ಸತ್ಯಾಸತ್ಯತೆ ಏನು ಎಂಬುದನ್ನು ತಿಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಆಕ್ಸಿಜನ್ ಬೇಡಿಕೆ ಹೆಚ್ಚುತ್ತಿದೆ. ಆದರೂ ಕೂಡ ಎಲ್ಲಾ ಆಸ್ಪತ್ರೆಗಳಿಗೂ ನಮ್ಮ ಇತಿಮಿತಿಯಲ್ಲಿ ಆಕ್ಸಿಜನ್ ಪೂರೈಕೆಯನ್ನು ಮಾಡಲಾಗುತ್ತಿದೆ. ಆ ಮೂಲಕ ಪರಿಸ್ಥಿತಿಯನ್ನು ಸಾಧ್ಯವಾದಷ್ಟು ನಿಭಾಯಿಸಲಾಗುತ್ತಿದೆ ಎಂದು ಹೇಳಿದ್ರು.

 

The post ಚಾಮರಾಜನಗರ ಪ್ರಕರಣ: ತನಿಖೆ ಮಾಡಲು ಪ್ರವೀಣ್​ ಸೂದ್​​ಗೆ ಸಚಿವ ಬೊಮ್ಮಾಯಿ ಸೂಚನೆ appeared first on News First Kannada.

Source: newsfirstlive.com

Source link