ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ನಿರಂತರ ಮಳೆ: ಕಾಳಜಿ ಕೇಂದ್ರ ತೆರೆದ ಜಿಲ್ಲಾಡಳಿತ | Chikkaballapur District Administration Opens Helpline and Care Centre for Public


ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ನಿರಂತರ ಮಳೆ: ಕಾಳಜಿ ಕೇಂದ್ರ ತೆರೆದ ಜಿಲ್ಲಾಡಳಿತ

ಸಾಂಕೇತಿಕ ಚಿತ್ರ

ಚಿಕ್ಕಬಳ್ಳಾಫುರ: ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಕಾಳಜಿ ಕೇಂದ್ರಗಳನ್ನು ತೆರೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ರೇಣುಮಾಕಲಹಳ್ಳಿ, ಪೆರೇಸಂದ್ರ, ಚಿಕ್ಕಬಳ್ಳಾಪುರ ನಗರದ ಜೈಭೀಮ್ ಹಾಸ್ಟೆಲ್ ಮತ್ತು ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಮಳೆಯಿಂದ ತೊಂದರೆಯಾದವರು ಆಶ್ರಯ ಪಡೆಯಯಬಹುದು ಎಂದು ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದ್ದಾರೆ. ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಜಿಲ್ಲೆಯ ಬಹುತೇಕ ಕೆರೆಗಳು ತುಂಬಿದ್ದು, ನದಿ ಮತ್ತು ಹಳ್ಳಗಳು ಉಕ್ಕಿ ಹರಿಯುತ್ತಿವೆ. ಸೇತುವೆಗಳು ಮುಳುಗಡೆಯಾಗಿರುವ ಪ್ರದೇಶದಲ್ಲಿ, ರಸ್ತೆಯ ಮೇಲೆ ನೀರು ಹರಿಯುತ್ತಿರುವ ಸ್ಥಳಗಳಲ್ಲಿ ಎಚ್ಚರಿಕೆಯಿಂದ ಇರಬೇಕು ಎಂದು ಸಾರ್ವಜನಿಕರಿಗೆ ಸೂಚಿಸಲಾಗಿದೆ. ತಾಲ್ಲೂಕು ಮಟ್ಟದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ತಹಶೀಲ್ದಾರರಿಗೆ ಸೂಚಿಸಲಾಗಿದೆ. ಜಿಲ್ಲೆಯ ಮಳೆಯ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 24 ಗಂಟೆಗಳ ಸಹಾಯವಾಣಿ ತೆರೆಯಲಾಗಿದೆ. ಅಗತ್ಯ ಬಿದ್ದಾಗ ಯಾವುದೇ ಹೊತ್ತಿನಲ್ಲಿ ಸಾರ್ವಜನಿಕರು ಸಹಾಯವಾಣಿಗೆ ಕರೆಮಾಡಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಸಹಾಯವಾಣಿ ಸಂಖ್ಯೆಗಳು 08156 277071 ಹಾಗೂ 08156 277077.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಇನ್ನೂ ಒಂದು ವಾರ ಮುಂದುವರಿಯುವ ಸಾಧ್ಯತೆಯಿದೆ. ನವೆಂಬರ್ 23ರವರೆಗೆ ಭಾರಿ ಮಳೆ ನಿರೀಕ್ಷಿತ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯುವ ಭೀತಿ ಎದುರಾಗಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮಳೆ ಸಾಧ್ಯತೆ ಕುರಿತು ‘ಟಿವಿ9 ಕನ್ನಡ ಡಿಜಿಟಲ್​’ಗೆ ಪ್ರತಿಕ್ರಿಯಿಸಿರುವ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹವಾಮಾನ ತಜ್ಞ ಡಾ.ಆರ್​.ಎಚ್.ಪಾಟೀಲ್, ಉತ್ತರ ಕರ್ನಾಟಕದಲ್ಲಿ ಇನ್ನೂ 2 ದಿನ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದಿದ್ದಾರೆ. ಮುಂದಿನ 48 ಗಂಟೆ ಧಾರಾಕಾರ ಮಳೆಯಾಗಲಿದೆ. ನ.24ರವರೆಗೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.

ವಾಯುಭಾರ ಕುಸಿತ ಪರಿಣಾಮ ಮೋಡಗಳು ದಕ್ಷಿಣದಿಂದ ಈಗ ಉತ್ತರ ಕರ್ನಾಟಕದತ್ತ ಚಲಿಸಿವೆ. ನಮ್ಮ ರಾಜ್ಯದ ದಕ್ಷಿಣ ಭಾಗದಂತೆ ಈಗ ಉತ್ತರ ಭಾಗದಲ್ಲಿಯೂ ನ.19 ಮತ್ತು 20ರಂದು ಸಾಕಷ್ಟು ಮಳೆಯಾಗಲಿದೆ. ಮಳೆಯಿಂದಾಗಿ ಹಿಂಗಾರು ಬೆಳೆಗೆ ಹಾನಿಯಾಗುವ ಸಾಧ್ಯತೆಯಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಹಿಂಗಾರು ಬೆಳೆಯಲ್ಲಿ‌ ನೀರು ನಿಲ್ಲದಂತೆ ರೈತರು ಮುಂಜಾಗ್ರತೆ ವಹಿಸಬೇಕು. ಗದ್ದೆಗಳಲ್ಲಿ ಬಸಿಗಾಲುವೆ ಮಾಡಿಕೊಳ್ಳಬೇಕು. ಮಳೆ ಪರಿಸ್ಥಿತಿ ಗಮನಿಸಿಕೊಂಡೇ ಕೃಷಿ ಚಟುವಟಿಕೆಗಳನ್ನು ನಿರ್ವಹಿಸಬೇಕು ಎಂದು ಅವರು ಕಿವಿಮಾತು ಹೇಳಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಭತ್ತ, ಕಬ್ಬು, ಮೆಕ್ಕೆಜೋಳ, ಹತ್ತಿ ಬೆಳೆಗಳಿಗೆ ಹಾನಿಯಾಗಿದೆ. ದೇವರ ಹುಬ್ಬಳ್ಳಿ ಸುತ್ತಮುತ್ತ 459 ಹೆಕ್ಟೇರ್‌ ಪ್ರದೇಶದಲ್ಲಿದ್ದ ಅಪಾರ ಬೆಳೆಗೆ ಹಾನಿಯಾಗಿದೆ. ಜಿಲ್ಲೆಯಲ್ಲಿ 11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹಿಂಗಾರು ಬೆಳೆಗಳು ಬಿತ್ತನೆಯಾಗಿದ್ದವು.ಇದನ್ನೂ ಓದಿ: ಚಾಮರಾಜನಗರದ ಒಂದು ಗ್ರಾಮವನ್ನು ದ್ವೀಪವಾಗಿ ಮಾರ್ಪಡಿಸಿದ ಧಾರಾಕಾರ ಮಳೆ, ಮನೆಗಳಲ್ಲೂ ನೀರು!
ಇದನ್ನೂ ಓದಿ: ಕರ್ನಾಟಕದಲ್ಲಿ ಧಾರಾಕಾರ ಮಳೆ: ಶಾಲೆಗಳಿಗೆ ರಜೆ ನೀಡುವ ಅಧಿಕಾರಿ ಡಿಸಿಗಳಿಗೆ, ಶಿಕ್ಷಣ ಇಲಾಖೆ ಸುತ್ತೋಲೆ

TV9 Kannada


Leave a Reply

Your email address will not be published. Required fields are marked *