ಪತ್ನಿಯನ್ನು ಕೊಂದ ಆರೋಪಿ ಪತಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು 7 ವರ್ಷಗಳ ಕಠಿಣ ಶಿಕ್ಷೆಗೆ ಮಾರ್ಪಾಡು ಮಾಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.

ಪತ್ನಿ ಕೊಲೆ ಮಾಡಿದ್ದ ಪತಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆ ಏಳು ವರ್ಷ ಕಠಿಣ ಶಿಕ್ಷೆಗೆ ಮಾರ್ಪಾಡು ಮಾಡಿ ಕರ್ನಾಟಕ ಹೈಕೋರ್ಟ್ ಆದೇಶ
ಬೆಂಗಳೂರು: ಪತ್ನಿಯನ್ನು ಕೊಂದ ಆರೋಪಿ ಪತಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು 7 ವರ್ಷಗಳ ಕಠಿಣ ಶಿಕ್ಷೆಗೆ ಮಾರ್ಪಾಡು ಮಾಡಿ ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಹೊರಡಿಸಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವೆಂಗಲ ಹೋಬಳಿಯ ಬೊಮ್ಮನಹಳ್ಳಿಯ ರಾಜೇಶ್ ಬಿನ್ ವೆಂಕಟರಮಣಪ್ಪ (39) ಎಂಬುವರು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಹಾಗೂ ಕೆ.ಎಸ್.ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ, ಆರೋಪಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಮಾರ್ಪಡಿದ್ದಿ, ಆರೋಪಿಯು ತನ್ನ ಹೆಣ್ಣು ಮಕ್ಕಳ ಹೆಸರಿಗೆ 3 ಲಕ್ಷ ಮೊತ್ತವನ್ನು ಠೇವಣಿಯಾಗಿ ಇರಿಸಬೇಕು ಎಂದು ನಿರ್ದೇಶಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲ ಸಿ.ಎಚ್.ಹನುಮಂತರಾಯ ಅವರು, ’ಆರೋಪಿಯು ತನ್ನ ಹೆಂಡತಿಯನ್ನು ಬೆಳಗಿನ ಜಾವದ 4 ಗಂಟೆಯಲ್ಲಿ, ಗ್ರಾಮದ ಹೊರ ವಲಯದ ಹೊಲದಲ್ಲಿ ಪರಪುರುಷನ ಜೊತೆ ಇದ್ದುದ್ದನ್ನು ನೋಡಿದ್ದ. ಈ ವೇಳೆ ಉಂಟಾದ ಗಂಭೀರ ಮತ್ತು ಹಠಾತ್ ಪ್ರಚೋದನೆಯಿಂದ ಸ್ವಯಂ ನಿಯಂತ್ರಣ ಹಾಗೂ ಮಾನಸಿಕ ಸಮತೋಲನ ಕಳೆದುಕೊಂಡು ಈ ಹತ್ಯೆ ನಡೆಸಿದ್ದಾನೆ. ಅಂತೆಯೇ, ಆತ ಘಟನಾ ಸ್ಥಳಕ್ಕೆ ನಿರಾಯುಧನಾಗಿ ಹೋಗಿದ್ದ. ಹೆಂಡತಿಯನ್ನು ಕೊಲೆ ಮಾಡುವ ಯಾವುದೇ ಉದ್ದೇಶ ಹೊಂದಿರಲಿಲ್ಲ. ಹೀಗಾಗಿ, ಇದನ್ನು ಕೊಲೆಯೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದರು. ಈ ವಾದಾಂಶವನ್ನು ಮಾನ್ಯ ಮಾಡಿರುವ ನ್ಯಾಯಪೀಠ ಮೇಲ್ಮನವಿಯನ್ನು ಭಾಗಶಃ ಪುರಸ್ಕರಿಸಿದೆ.