ಪೊಲೀಸ್ ವಿಚಾರಣೆಗೆ ಹೆದರಿ ಆತ್ಮಹತ್ಯೆಗೆ ಯತ್ನ ಪ್ರಕರಣ- ಒಂದೇ ಕುಟುಂಬದ ನಾಲ್ವರ ಸಾವು


ಕೋಲಾರ: ಮಗು ಮಾರಾಟ ಪ್ರಕರಣದಲ್ಲಿ ಪೊಲೀಸರ ವಿಚಾರಣೆಗೆ ಹೆದರಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಮುನಿಯಪ್ಪ(70), ಬಾಬು (45) ಹಾಗೂ ಗಂಗೋತ್ರಿ(17) ನಾರಾಯಣಮ್ಮ (65) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಮೃತರು ಕೋಲಾರ ನಗರದ ಕಾರಂಜಿಕಟ್ಟೆ ಬಡಾವಣೆ ನಿವಾಸಿಗಳಾಗಿದ್ದಾರೆ. ಮಗು ಮಾರಾಟ ಪ್ರಕರಣದಲ್ಲಿ ಕುಟುಂಬದ ವಿರುದ್ಧ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್​ ವಿಚಾರಣೆಗೆ ಹೆದರಿದ ಕುಟುಂಬಸ್ಥರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ವಿಷ ಸೇವಿಸಿದ್ದ ಕುಟುಂಬಸ್ಥರನ್ನು ಆರ್.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ನಿನ್ನೆ ಸಂಜೆ ಕುಟುಂಬಸ್ಥರೆಲ್ಲರೂ ಒಟ್ಟಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನು ಇದೇ ಕುಟುಂಬದ ಪುಷ್ಪ(33) ಅವರ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪುಷ್ಪ ಎಂಬ ಮಹಿಳೆ ಗಂಡು ಮಗುವೊಂದನ್ನ ಬೇರೊಬ್ಬರಿಗೆ ಮಾರಾಟ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಪ್ರಕರಣ ದಾಖಲು ಮಾಡುತ್ತಿದ್ದಂತೆ ಮಾನಕ್ಕೆ ಅಂಜಿ ಎಲ್ಲರೂ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News First Live Kannada


Leave a Reply

Your email address will not be published.