ಸಚಿವ ಬಿ.ಸಿ.ನಾಗೇಶ್
ಬೆಂಗಳೂರು: ಕೊರೊನಾ ಸೋಂಕಿನ 3ನೇ ಅಲೆ ವ್ಯಾಪಕವಾಗಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಜನವರಿ 31ರವರೆಗೆ ಶಾಲೆಗಳಿಗೆ ರಜೆ ವಿಸ್ತರಿಸಿ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯು ಆದೇಶ ಹೊರರಡಿಸಿದೆ. ಈ ಮೊದಲು ಜನವರಿ 19ರವರೆಗೆ ಮಾತ್ರ ಶಾಲೆಗಳಿಗೆ ರಜೆ ನೀಡಲಾಗಿತ್ತು. ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣವು ಶೇ 5ಕ್ಕಿಂತ ಹೆಚ್ಚಾದರೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಜ.31ರವರೆಗೆ 1ರಿಂದ 9ನೇ ತರಗತಿವರೆಗೆ ರಜೆ ಘೋಷಿಸಲಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ 10, 11, 12ನೇ ತರಗತಿ ನಡೆಸುತ್ತಿದ್ದೇವೆ. ಗ್ರಾಮಾಂತರ ಪ್ರದೇಶದಲ್ಲಿ ಕೊರೊನಾ ಸೋಂಕು ಕಡಿಮೆಯಿದೆ. ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಕೊರೊನಾ ಸಂಬಂಧಿತ ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಂಗಳೂರು, ಮೈಸೂರು, ಬೆಳಗಾವಿ ಬಿಟ್ಟು ಬೇರೆಲ್ಲೂ ಆತಂಕವಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು ನಗರದಲ್ಲಿ ಸೋಂಕಿನ ತೀವ್ರತೆ ಆಧರಿಸಿ ಮುಂದಿನ ದಿನಗಳಲ್ಲಿ 10, 11 ಹಾಗೂ 12ನೇ ತರಗತಿ ಬಗ್ಗೆ ಅಗತ್ಯ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
(ಮತ್ತಷ್ಟು ಮಾಹಿತಿ ಶೀಘ್ರ ಅಪ್ಡೇಟ್ ಆಗಲಿದೆ)