ಬೆಂಗಳೂರು: ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಬೀಳಲಿದೆ. ಹೀಗಾಗಿ ಕೂಡಲೇ ಮಕ್ಕಳಿಗೆ ಲಸಿಕೆ ನೀಡಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಈ ಆಗ್ರಹಕ್ಕೆ ಕೇಂದ್ರ ಸರ್ಕಾರ ಇಂದು ಸ್ಪಷ್ಟನೆ ನೀಡಿದೆ.

ವಿಶ್ವದ ಯಾವುದೇ ದೇಶವು ಮಕ್ಕಳಿಗೆ ಲಸಿಕೆಗಳನ್ನು ನೀಡುತ್ತಿಲ್ಲ. ಅಲ್ಲದೆ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಯಾವುದೇ ಶಿಫಾರಸು ಮಾಡಿಲ್ಲ. ಮಕ್ಕಳಲ್ಲಿ ಲಸಿಕೆಗಳ ಸುರಕ್ಷತೆಯ ಬಗ್ಗೆ ಅಧ್ಯಯನಗಳು ನಡೆದಿದೆ ಎಂದು ತಿಳಿಸಿದೆ.

ಭಾರತದಲ್ಲಿ ಮಕ್ಕಳ ಮೇಲೆ ಶೀಘ್ರವೇ ಕ್ಲಿನಿಕಲ್ ಟ್ರಯಲ್ ಆರಂಭವಾಗಲಿದೆ. ಪ್ರಯೋಗಗಳ ಆಧಾರದ ಮೇಲೆ ಸಾಕಷ್ಟು ದತ್ತಾಂಶಗಳು ಲಭ್ಯವಾದ ನಂತರ ಈ ಬಗ್ಗೆ ನಮ್ಮ ವಿಜ್ಞಾನಿಗಳು ನಿರ್ಧಾರ ಕೈಗೊಳ್ಳಬೇಕೇ ಹೊರತು, ವಾಟ್ಸಪ್ ಗ್ರೂಪ್‍ಗಳಲ್ಲಿ ಸೃಷ್ಟಿಸಲಾಗುವ ಭೀತಿ ಮತ್ತು ಕೆಲವು ರಾಜಕಾರಣಿಗಳ ರಾಜಕೀಯ ಆಧರಿಸಿ ಮಕ್ಕಳಿಗೆ ಲಸಿಕೆ ಹಾಕುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗದು ಎಂದಿದೆ.

ಮೇ 18 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನೀತಿ ಆಯೋಗದ ಸದಸ್ಯ (ಆರೋಗ್ಯ ವಿಭಾಗ) ಡಾ.ವಿ.ಕೆ.ಪೌಲ್, ಮಕ್ಕಳ ಮೇಲೆ ಕೊವಾಕ್ಸಿನ್ ಲಸಿಕೆಯ ವೈದ್ಯಕೀಯ ಪ್ರಯೋಗ 10-12 ದಿನಗಳಲ್ಲಿ ಆರಂಭವಾಗಲಿದೆ ಎಂದು ತಿಳಿಸಿದ್ದರು.

ಕೊವಾಕ್ಸಿನ್ ಲಸಿಕೆಯನ್ನು 2ರಿಂದ 18 ವರ್ಷದವರ ಮೇಲೆ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ (ಡಿಸಿಜಿಐ) ಅನುಮತಿ ನೀಡಿದೆ ಎಂದು ವಿವರಿಸಿದರು. ಭಾರತದ ಹಲವು ವೈದ್ಯಕೀಯ ಸಂಸ್ಥೆಗಳಲ್ಲಿ 525 ಮಕ್ಕಳ ಮೇಲೆ ಕೊವಾಕ್ಸಿನ್ ಲಸಿಕೆ ಪ್ರಯೋಗ ನಡೆಸಲು ಸಿದ್ಧತೆ ನಡೆದಿದೆ.  ಇದನ್ನೂ ಓದಿ : ಗರ್ಭಿಣಿಯಾದ್ರೂ ಸೋಂಕಿತರಿಗೆ ಚಿಕಿತ್ಸೆ – ಮಗುವಿಗೆ ಜನ್ಮ ನೀಡಿ ಪ್ರಾಣ ಬಿಟ್ಟ ನರ್ಸ್

5 ರಿಂದ 18 ವರ್ಷದ ಒಳಗಿನವರಲ್ಲಿ ಲಸಿಕೆ ಪ್ರಯೋಗ ನಡೆಸಲು ಅನುಮತಿ ನೀಡುವಂತೆ ಫೆಬ್ರುವರಿಯಲ್ಲಿ ಭಾರತ್ ಬಯೋಟೆಕ್ ಮನವಿ ಮಾಡಿತ್ತು. ಈ ಸಮಯದಲ್ಲಿ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‍ಸಿಒ) ವಯಸ್ಕರ ಮೇಲೆ ಈ ಲಸಿಕೆಯ ಪರಿಣಾಮದ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿತ್ತು.

ಕೆಲವು ಷರತ್ತುಗಳನ್ನು ವಿಧಿಸಿ ಲಸಿಕೆಯ ಪ್ರಯೋಗಕ್ಕೆ ಸಿಡಿಎಸ್‍ಸಿಒಒ ವಿಷಯ ತಜ್ಞರ ಸಮಿತಿ ಶಿಫಾರಸು ಮಾಡಿತ್ತು. ಶಿಫಾರಸಿನ ಹಿನ್ನೆಲೆಯಲ್ಲಿ ಮೇ 11 ರಂದು ಮಕ್ಕಳ ಮೇಲೆ ಲಸಿಕೆ ಪ್ರಯೋಗಕ್ಕೆ ಡಿಸಿಜಿಐ ಕೊವಾಕ್ಸಿನ್ ಲಸಿಕೆಗೆ ಅನುಮತಿ ನೀಡಿತ್ತು.

The post ಮಕ್ಕಳಿಗೆ ಕೊರೊನಾ ಲಸಿಕೆ ಯಾವಾಗ? – ಕೇಂದ್ರದಿಂದ ಸಿಕ್ತು ಸ್ಪಷ್ಟನೆ appeared first on Public TV.

Source: publictv.in

Source link