ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇವತ್ತು ಮತ್ತು ನಾಳೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಪ್ರಬಲ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಗೆ ಮುಂದಿನ ಎರಡು ದಿನಗಳು ಭಾರೀ ಮಳೆಯ ನಿರೀಕ್ಷೆ ಇದೆ. ಚೆನ್ನೈನಿಂದ 270 ಕಿಮೀ ದೂರದಲ್ಲಿ ವಾಯು ಭಾರ ಕುಸಿತ ಕೇಂದ್ರಿಕೃತವಾಗಿದೆ. ನಾಳೆ ತಮಿಳುನಾಡು ಹಾಗೂ ಆಂಧ್ರ ಪ್ರದೇಶ ಕರಾವಳಿ ಭಾಗಕ್ಕೆ ಬಂದು ಅಪ್ಪಳಿಸುವ ಸಾಧ್ಯತೆ ಇದೆ. ಆದ್ದರಿಂದ ಬೆಂಗಳೂರು ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಸೇರಿದಂತೆ ಗ್ರಾಮಾಂತರಕ್ಕೆ ಇಂದು ಆರೆಂಜ್ ಅಲರ್ಟ್ ನೀಡಲಾಗಿದ್ದು, ನಾಳೆ ಯಲ್ಲೋ ಅಲರ್ಟ್ ಸೂಚನೆ ನೀಡಲಾಗಿದೆ. ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎಂದು ಸದಾನಂದ ಅಡಿಗ ತಿಳಿಸಿದ್ದಾರೆ.