ಬೆಂಗಳೂರು: ದೇಶದಲ್ಲಿ ಕೊರೊನಾ ಎರಡನೇ ಅಲೆಯ ಕೊರೊನಾ ಸೋಂಕಿನ ತೀವ್ರತೆ ಹೆಚ್ಚಾಗಿದೆ. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೋಂಕಿನ ನಿಯಂತ್ರಣ ಮಾಡಲು ವಿಫಲವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆರೋಪ ಮಾಡಿದ್ದಾರೆ.

ಸರಣಿ ಟ್ವೀಟ್ ಮಾಡಿ ಪ್ರಧಾನಿ ಮೋದಿ ಹಾಗೂ ರಾಜ್ಯ ಸರ್ಕಾರ ನೀತಿಗಳನ್ನು ಟೀಕೆ ಮಾಡಿರುವ ಸಿದ್ದರಾಮಯ್ಯ ಅವರು, ಲಸಿಕೆ ಪಡೆಯುವುದನ್ನು ಪ್ರೋತ್ಸಾಹಿಸಬೇಕಾದ ಬಿಜೆಪಿ ಸರ್ಕಾರ, ಅದರ ಬೆಲೆ ಏರಿಸಿ ಜನತೆ ಅದನ್ನು ಪಡೆಯದಂತೆ ಮಾಡಲು ಹೊರಟಿದೆ ಎಂದು ಹೇಳಿದ್ದಾರೆ.

ಅಲ್ಲದೇ ಟೀಕಾ ಉತ್ಸವ್ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ ಎಂದು ಪ್ರಧಾನಿ ಮೋದಿ ಅವರಿಗೆ ಆಗ್ರಹಿಸಿದ್ದಾರೆ.

ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ಬಿಜೆಪಿ ನಾಯಕರು, ಈಗ ಪ್ರಧಾನಿ ಘೋಷಿಸಿರುವ ಎರಡು ತಿಂಗಳ ಕಾಲ ಐದು ಕಿಲೋ ಅಕ್ಕಿ ನೀಡುವ ಯೋಜನೆಯನ್ನು ಕೊಂಡಾಡುತ್ತಿರುವುದು ತಮಾಷೆಯಾಗಿದೆ. ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಹಲವಾರು ಜಿಲ್ಲೆಗಳಲ್ಲಿ ತಿಂಗಳಿಗೆ ಐದು ಕಿಲೋ ಅಕ್ಕಿ ಬದಲಿಗೆ ಎರಡು ಕಿಲೋ ಅಕ್ಕಿ ನೀಡುತ್ತಿದೆ. ಈ ಅನ್ಯಾಯವನ್ನು ತಕ್ಷಣ ಸರಿಪಡಿಸಿ, ಬಡವರ ಶಾಪಕ್ಕೆ ಈಡಾಗಬೇಡಿ ಸಿಎಂ ಬಿಎಸ್​​ ಯಡಿಯೂರಪ್ಪ ಎಂದು ಆಗ್ರಹಿಸಿದ್ದಾರೆ.

ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ ಬಡವರ ವಿರೋಧಿ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ‌.. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೇ ಇರದು. ಔಷಧಿ, ಆಮ್ಲಜನಕ, ವೆಂಟಿಲೇಟರ್‌ ಕೊಡಿ ಎಂದು ಪ್ರಧಾನಿ ಅವರನ್ನು ಬೇಡುತ್ತಿರುವ ಮುಖ್ಯಮಂತ್ರಿ ಅವರನ್ನು ಕಂಡಾಗ ಕನಿಕರ ಮೂಡುತ್ತಿದೆ. 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ ಎಂದು ವಾಗ್ದಾಳಿ ಮಾಡಿದ್ದಾರೆ.

The post ‘ಮೋದಿಯವ್ರೇ ಬಾಯಿ ಬಡಾಯಿ ಬಿಟ್ಟಾಕಿ ಎಲ್ಲರಿಗೂ ಫ್ರೀ ಲಸಿಕೆ ಕೊಡಿ’- ಸಿದ್ದರಾಮಯ್ಯ ವಾಗ್ದಾಳಿ appeared first on News First Kannada.

Source: News First Kannada
Read More