ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ ಮೂರು ದಿನಗಳ ಕಾಲ ಜೋರು ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಜುಲೈ 21ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ ಎನ್ನಲಾಗಿದೆ.

ಇನ್ನು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ತೀವ್ರತೆ ಹೆಚ್ಚಾಗಿದೆ. ಆದ್ದರಿಂದ ಜು.18 ರಿಂದ 21ರವರೆಗೆ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಹಾಗಾಗಿ ಆಯಾ ಪ್ರದೇಶದ ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಜುಲೈ 18ರಿಂದ 19ರವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಜುಲೈ 20 ಮತ್ತು 21ರಂದು ಯೆಲ್ಲೋ ಅಲರ್ಟ್‌ ಘೋಷಿಸಿ ಆದೇಶಿಸಿರುವ ಹವಾಮಾನ ಇಲಾಖೆ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆಯಿದೆ ಎಂದು ಭವಿಷ್ಯ ನುಡಿದಿದೆ.

ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಮಳೆ; 11 ಕಡೆ ಭೂಕುಸಿತ.. 22 ಕ್ಕೇರಿದ ಸಾವಿನ ಸಂಖ್ಯೆ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

The post ರಾಜ್ಯದಲ್ಲಿ ಮುಂದಿನ ಮೂರು ದಿನವೂ ಭಾರೀ ಮಳೆ; ಹವಾಮಾನ ಇಲಾಖೆ ಭವಿಷ್ಯ appeared first on News First Kannada.

Source: newsfirstlive.com

Source link