ಬೆಂಗಳೂರು: ರಾಜ್ಯಾದ್ಯಂತ ಆರ್ಭಟಿಸುತ್ತಿರೋ ಮಳೆರಾಯನ ಅಬ್ಬರಕ್ಕೆ ಕರುನಾಡು ಅಕ್ಷರಶಃ ತತ್ತರಿಸಿ ಹೋಗಿದೆ. ಬಿಟ್ಟು ಬಿಡದೇ ಸುರಿಯುತ್ತಿರೋ ಮಳೆಗೆ ಮನೆಗಳನ್ನ, ಬೆಳೆಗಳನ್ನ ಕಳೆದುಕೊಂಡು ಜನರು ಕಂಗಾಲಾಗಿ ಹೋಗಿದ್ದಾರೆ. ಇತ್ತ ರಾಜ್ಯಾದ್ಯಂತ ನವೆಂಬರ್ 22ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇನ್ನು ರಾಜ್ಯ ಸರ್ಕಾರ ರಾಜ್ಯದಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮಳೆಯ ಕಾರಣ ರಜೆ ನೀಡಲು ಸೂಚನೆ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿಶಾಲ್ ಆರ್ ಸೂಚನೆ ನೀಡಿದ್ದಾರೆ.
ಇಂದು ಮಕ್ಕಳು ಮಳೆಯ ನಡುವೆಯೂ ಶಾಲೆಯ ಕಡೆ ಮುಖ ಮಾಡಿ ಸಾಕಷ್ಟು ಸಮಸ್ಯೆ ಎದುರಿಸಿದ್ದರು. ರಾಜ್ಯ ಸರ್ಕಾರ ಹಾಗೂ ಹವಾಮಾನ ಇಲಾಖೆಯ ಸೂಚನೆ ಹಿನ್ನಲೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ನವೆಂಬರ್ 19 ಹಾಗೂ 20 ರಂದು ಎರಡು ದಿನ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಾಂತ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ ಮಾಡಿ ಆದೇಶ ನೀಡಿದ್ದಾರೆ.