ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ | Karnataka Legislative Council Ticket Seekers Lobby in BJP Congress


ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ

ವಿಧಾನಸೌಧ

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆಯ (Karnataka Legislative Council) ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಚರ್ಚೆ ಆರಂಭವಾಗಿವೆ. ಕೂಡಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಬೇಕು ಎಂದು ಹೈಕಮಾಂಡ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಈಚೆಗಷ್ಟೇ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು. ಅಭ್ಯರ್ಥಿಯನ್ನು ಶೀಘ್ರ ಘೋಷಣೆ ಮಾಡಿದರೆ ಚುನಾವಣೆಗೆ ತಯಾರಿ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಹೀಗಾಗಿ ಅಭ್ಯರ್ಥಿ ಘೋಷಣೆ ವಿಳಂಬ ಮಾಡಬೇಡಿ ಎಂದು ವಿನಂತಿಸಿದರು. ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ನಡೆದಿರುವ ಚರ್ಚೆಯ ಬಗ್ಗೆಯೂ ನಡ್ಡಾ ಅವರಿಗೆ ಬೊಮ್ಮಾಯಿ ವಿವರಿಸಿದರು. ಇನ್ನೆರೆಡು ದಿನಗಳೊಳಗೆ ದೆಹಲಿಯಲ್ಲಿ ವರಿಷ್ಠರ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆಯಿದೆ.

ಟಿಕೆಟ್​ಗಾಗಿ ಕಾಂಗ್ರೆಸ್​ನಲ್ಲಿ ಮುಂದುವರಿದ ಲಾಬಿ
ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಲಾಬಿ ಮುಂದುವರಿದಿದೆ. ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುತ್ತಿರುವ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು ಬೆಂಗಳೂರಿನಲ್ಲಿ ಬೀಡುಬಿಟ್ಟಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಸನದಿ ಸೇರಿದಂತೆ 10ಕ್ಕೂ ಹೆಚ್ಚು ಟಿಕೆಟ್ ಆಕಾಂಕ್ಷಿಗಳಿಂದ ಟಿಕೆಟ್‌ಗಾಗಿ ಲಾಬಿ ನಡೆಯುತ್ತಿದೆ.

ಎರಡು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಂದೇ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಟಿಕೆಟ್​ಗಾಗಿ ಆರು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಈ ಬಾರಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಬೇಕು ಎಂದು ಹಲವರು ಪಟ್ಟು ಹಿಡಿದಿದ್ದಾರೆ. ಕಳೆದ ಬಾರಿ ಶ್ರೀನಿವಾಸ ಮಾನೆ ಈ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಈ ಬಾರಿ ಅವರು ವಿಧಾನಸಭೆಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್​ಗಾಗಿ ಲಾಬಿ ಚುರುಕಾಗಿದೆ.

ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ; ಐವರು ಹಾಲಿ ಎಂಎಲ್​ಸಿಗಳಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧಾರ
ಇದನ್ನೂ ಓದಿ: ಡಿ. 10ಕ್ಕೆ ವಿಧಾನ ಪರಿಷತ್ ಕ್ಷೇತ್ರಗಳಿಗೆ ಚುನಾವಣೆ; ಜನವರಿ 5ಕ್ಕೆ ತೆರವಾಗಲಿರುವ ಸ್ಥಾನಗಳಿವು

TV9 Kannada


Leave a Reply

Your email address will not be published. Required fields are marked *