
ಸಾಂದರ್ಭಿಕ ಚಿತ್ರ
ಪಿಎಸ್ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಕೈಗೊಂಡ ಮರು ಪರೀಕ್ಷೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಒತ್ತಾಯಿಸಿ ಅಭ್ಯರ್ಥಿಗಳು ಬೆಂಗಳೂರು ನಗರದ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನಿಡಿದ ಸಿಎಂ ಬಸವರಾಜ ಬೊಮ್ಮಾಯಿ, ಮನವಿ ಪರಿಶೀಲಿಸುವುದಾಗಿ ಹೇಳಿದ್ದಾರೆ.
ಬೆಂಗಳೂರು: 545 ಪಿಎಸ್ಐ ಹುದ್ದೆಗಳ ಭರ್ತಿ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ(PSI Recruitment Scam) ಪ್ರಕರಣ ಸಂಬಂಧ ರಾಜ್ಯ ಸರ್ಕಾರ ತೀರ್ಮಾನಿಸಿದ ಮರು ಪರೀಕ್ಷೆ (Re Exam)ಯನ್ನು ಕೈಬಿಡುವಂತೆ ಒತ್ತಾಯಿಸಿ ನಗರದ ಫ್ರೀಡಂಪಾರ್ಕ್ (Freedom park)ನಲ್ಲಿ ಅಭ್ಯರ್ಥಿಗಳು ಪ್ರತಿಭಟನೆ (Protest) ನಡೆಸಿದ್ದಾರೆ. ಪ್ರತಿಭಟನಾಕಾರರಿಗೆ ಬೆಂಬಲ ನೀಡುವ ಸಲುವಾಗಿ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರ ಸರಿಯಲ್ಲ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ. ಕೂಡಲೇ ನಿರ್ಧಾರದಿಂದ ಹಿಂದೆಸರಿದು ಪ್ರಾಮಾಣಿಕವಾಗಿ ಆಯ್ಕೆಯಾದವರಿಗೆ ನೇಮಕಾತಿ ಆದೇಶ ಪತ್ರ ನೀಡುವಂತೆ ಅಭ್ಯರ್ಥಿಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅಭ್ಯರ್ಥಿಗಳು ಒಬ್ಬೊಬ್ಬರಾಗಿಯೇ ಫ್ರೀಡಂಪಾರ್ಕ್ಗೆ ಆಗಮಿಸಿ ಪ್ರತಿಭಟನೆ ಆರಂಭಿಸಿದ್ದು, 300ಕ್ಕೂ ಹೆಚ್ಚು ಮಂದಿ ಜಮಾಯಿಸಿದ್ದಾರೆ. ಇವರಿಗೆ ಸಮತಾ ಸೈನಿಕ ದಳ, ದಲಿತಪರ ಸಂಘಟನೆಗಳು, ರೈತಪರ ಸಂಘಟನೆಗಳು, ಮಹಿಳಾ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.