Karnataka Weather Today: ಕರ್ನಾಟಕದ ಕರಾವಳಿಯಲ್ಲಿ ಇಂದು (ಶುಕ್ರವಾರ) ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಇಂದು ಕೇರಳಕ್ಕೆ ಮುಂಗಾರು ಆಗಮಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು: ಕರ್ನಾಟಕ (Rain in Karnataka) ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ (Bengaluru Rains) ನಿನ್ನೆ ಪೀಣ್ಯ ದಾಸರಹಳ್ಳಿ, ಬಾಗಲಗುಂಟೆ, ಮಲ್ಲಸಂದ್ರ, ಹೆಸರಘಟ್ಟದಲ್ಲಿ ಮಳೆ ಸುರಿದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲೂ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿಯಲ್ಲೂ ಇಂದು ವರುಣನ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್ ಹೇಳಿದ್ದಾರೆ. ಇಂದು (ಮೇ 27) ಕೇರಳದಲ್ಲಿ ನೈಋತ್ಯ ಮಾನ್ಸೂನ್ (Monsoon 2022) ಪ್ರವೇಶವಾಗುವ ನಿರೀಕ್ಷೆಯಿದೆ. ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೂ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿಯಲ್ಲಿ ಇಂದು (ಶುಕ್ರವಾರ) ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಮುಂಗಾರು ಇಂದು ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ಶನಿವಾರ ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ. ಮುಂದಿನ 2 ದಿನಗಳ ಕಾಲ ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯೊಂದಿಗೆ ಮಿಂಚು ಸಹಿತ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ಕೇರಳದ ಪಥನಾಂತಿಟ್ಟ, ಅಲಪ್ಪುಳ, ಎರ್ನಾಕುಲಂ, ಕೊಟ್ಟಾಯಂ, ಇಡುಕ್ಕಿ, ಕೋಳಿಕೋಡ್ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಭಾರತ ಶಾಖದ ಅಲೆಯಿಂದ ತತ್ತರಿಸಿ ಹೋಗಿದ್ದು, ಮುಂದಿನ 4 ದಿನಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಶಾಖದ ಅಲೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇಂದು ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮುಂದಿನ 2 ದಿನಗಳಲ್ಲಿ ಮತ್ತು ಮುಂದಿನ 4 ದಿನಗಳಲ್ಲಿ ಈಶಾನ್ಯ ಭಾರತದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.