ಪರೀಕ್ಷೆ ಬರೆಯಲು ಉತ್ಸುಕರಾಗಿದ್ದೇವೆ – ಸಚಿವರ ಸಂವಾದದಲ್ಲಿ ವಿದ್ಯಾರ್ಥಿಗಳ ಮನದಾಳದ ಮಾತು

ಬೆಂಗಳೂರು: ಪರೀಕ್ಷೆ ಬರೆಯಲು ನಾವು ಸಿದ್ದರಿದ್ದೇವೆ ಎಂದು ಎಸ್‍ಎಸ್‍ಎಲ್‍ಸಿ ಮಕ್ಕಳು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಸಂವಾದದಲ್ಲಿ ತಿಳಿಸಿದ್ದಾರೆ. ಮಕ್ಕಳ ಅಭಿಪ್ರಾಯ ಸಂಗ್ರಹ ಮಾಡಲು ಇಂದು ವಿದ್ಯಾರ್ಥಿಗಳ ಜೊತೆ ಸುರೇಶ್ ಕುಮಾರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.

ಅನೇಕ ರಾಜ್ಯಗಳು ಮಂಡಳಿ ಪರೀಕ್ಷೆಯನ್ನು ರದ್ದು ಮಾಡಿದ ಸಂದರ್ಭದಲ್ಲಿ ಯಾವುದೇ ರೂಪದಲ್ಲೇ ಆಗಲಿ ಪರೀಕ್ಷೆ ನಡೆಸುವ ಮೂಲಕ ನಮ್ಮ ಆತ್ಮವಿಶ್ವಾಸ ಮೂಡಿಸಿದ್ದಲ್ಲದೇ ನಮ್ಮ ಪ್ರತಿಭೆ, ಸಾಮಥ್ರ್ಯ ಪ್ರದರ್ಶನಕ್ಕೆ ಸರ್ಕಾರ ಅವಕಾಶ ಕಲ್ಪಿಸಿಕೊಟ್ಟು, ಪರೀಕ್ಷೆಯಿಲ್ಲದೇ ಉತ್ತೀರ್ಣರಾದವರೆಂದು ಜೀವನವಿಡೀ ಕಾಡುತ್ತಿದ್ದ ಮುಜುಗರ,ತಪ್ಪಿತಸ್ಥ ಭಾವನೆಯಿಂದ ನಮ್ಮನ್ನು ಮುಕ್ತಗೊಳಿಸಿದ್ದಕ್ಕೆ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆ ಎಂದು ಇಂದು ಸಂವಾದದಲ್ಲಿ ಭಾಗಿಯಾದ ಮಕ್ಕಳು ಹರ್ಷ ವ್ಯಕ್ತಪಡಿಸಿದರು.

ಈಗಾಗಲೇ ಪರೀಕ್ಷಾ ಮಂಡಳಿಯಿಂದ ಕಳುಹಿಸಿದ ಮಾದರಿ ಪ್ರಶ್ನೆಪತ್ರಿಕೆಗಳು ಮತ್ತು ಒಎಂಆರ್ ಶೀಟ್‍ಗಳನ್ನು ಉತ್ತರಿಸಿದ್ದೇವೆ. ನಮಗೆ ಪರೀಕ್ಷೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮಕ್ಕಳು ಅಭಿಪ್ರಾಯಪಟ್ಟರು. ಪರೀಕ್ಷೆ ಅಂಕಗಳು, ಪರೀಕ್ಷಾ ಸಮಯ ಕುರಿತು ತಮ್ಮ ಆತಂಕ, ಗೊಂದಲಗಳನ್ನು ನಿವಾರಿಸಿಕೊಂಡ ಮಕ್ಕಳು ರಫ್ ವರ್ಕ್ ಪ್ರಶ್ನೆ ಪತ್ರಿಕೆಯೊಂದಿಗೆ ಹೆಚ್ಚುವರಿ ಹಾಳೆಗಳನ್ನು ಒದಗಿಸುವ ಮಂಡಳಿ ಕ್ರಮವನ್ನು ಮುಕ್ತಕಂಠದಿಂದ ಸ್ವಾಗತಿಸಿದರು. ಬಹುತೇಕ ಮಕ್ಕಳು ಪರೀಕ್ಷಾ ವೇಳೆ ನಿಗದಿ ಕುರಿತು ಸಮಾಧಾನ ವ್ಯಕ್ತಪಡಿಸಿದರು. ಪರೀಕ್ಷೆ ಕುರಿತು ಕೈಗೊಂಡ ವಿವಿಧ ಕ್ರಮಗಳು, ಪರೀಕ್ಷಾ ಪಾವಿತ್ರ್ಯತೆಯ ಕ್ರಮಗಳನ್ನು ಮಕ್ಕಳು ಶ್ಲಾಘಿಸಿದರು. ಇದನ್ನೂ ಓದಿ: ಸಿಇಟಿ- 2021 ಪರೀಕ್ಷೆಗೆ ಆನ್‍ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿನಿಯೊಬ್ಬಳು ತಮ್ಮೂರಿಗೆ ಇನ್ನು ಪೂರ್ಣಪ್ರಮಾಣದಲ್ಲಿ ಬಸ್ ಸಂಚಾರವಿಲ್ಲದೇ ಇರುವುದರಿಂದ ಬಸ್ ಸೌಲಭ್ಯ ಒದಗಿಸುವ ಕುರಿತ ಅವಳ ಆತಂಕ ನಿವಾರಿಸಿದ ಸಚಿವರು ಬಸ್ ಸೌಲಭ್ಯ ಒದಗಿಸುವ ಕುರಿತು ಇಂದು ನಿಮ್ಮ ಜಿಲ್ಲಾಧಿಕಾರಿಗಳ ಗಮನಕ್ಕೆ ವಿಷಯ ತರಲಾಗುವುದು. ನೀವು ಪರೀಕ್ಷೆ ತಯಾರಾಗುವುದಕ್ಕೆ ಮಾತ್ರವೇ ತಮ್ಮ ಏಕಾಗ್ರತೆ ಇರಲಿ ಎಂದು ಸುರೇಶ್ ಕುಮಾರ್ ಅಭಯ ನೀಡಿದರು.

ಪರೀಕ್ಷೆ ಬರೆಯಲು ಸಾಕ್ಷಿ:
ಕಾರವಾರ ಜಿಲ್ಲೆಯ ಗ್ರಾಮೀಣ ಪ್ರದೇಶದ ಸಾಕ್ಷಿ ಎಂಬ ವಿದ್ಯಾರ್ಥಿನಿ, ‘ನೀವು ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಯುತ್ತದೆ ಮತ್ತು ಪರೀಕ್ಷೆ ಬರೆಯುವ ಮೂಲಕವೇ ನಮ್ಮ ಸಾಮಥ್ರ್ಯ ಸಾಬೀತು ಪಡಿಸಲು ಅವಕಾಶ ನೀಡಿರುವುದರಿಂದ ನಾವೆಲ್ಲ ಧೈರ್ಯವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆಯಲು ಸಿದ್ಧವಾಗಿರುವುದಕ್ಕೆ ನಾನೇ ಸಾಕ್ಷಿ’ ಎಂದು ಆತ್ಮವಿಶ್ವಾಸ ಪ್ರದರ್ಶಿಸಿದಾಗ ಮುಕ್ತ ಸಂವಾದದಲ್ಲಿ ಭಾಗಿಯಾದ ರಾಜ್ಯದ 1000ಕ್ಕೂ ಹೆಚ್ಚು ಮಕ್ಕಳು ಖುಷಿಯಿಂದ ಚಪ್ಪಾಳೆ ತಟ್ಟಿ ತಾವೆಲ್ಲ ಪರೀಕ್ಷೆ ಬರೆಯಲು ದಿನಗಣನೆ ಮಾಡುತ್ತಿರುವುದನ್ನು ಮುಕ್ತವಾಗಿ ಹಂಚಿಕೊಂಡರು.

ಪರೀಕ್ಷೆ ನಡೆಸದೇ ಹೋಗಿದ್ದರೆ ನಾವು ಕೊರೊನಾ ಬ್ಯಾಚ್ನಲ್ಲಿ ಪರೀಕ್ಷೆ ಬರೆಯದೇ ಪಾಸಾದವರೆಂಬ ಒಂದು ಅಪಖ್ಯಾತಿ ನಮ್ಮ ಮೇಲೆ ಉಳಿದುಬಿಡುತ್ತಿತ್ತೇನೋ ಎಂಬ ಆತಂಕ ನಮ್ಮಲ್ಲಿ ಉಳಿಯದಂತೆ ಮಾಡಿದ್ದಕ್ಕೆ ನಾವು ಕರ್ನಾಟಕ ಸರ್ಕಾರಕ್ಕೆ ನಮ್ಮ ಕೃತಜ್ಞತೆಗಳನ್ನು ತಿಳಿಸಲು ಈ ವೇದಿಕೆಯನ್ನು ಮೊದಲು ಬಳಸಿಕೊಳ್ಳುತ್ತೇವೆಂದು ಅನೇಕ ಮಕ್ಕಳು ಹೇಳಿದ್ದು ವೈಯಕ್ತಿಕವಾಗಿ ನಮ್ಮ ಅಧಿಕಾರಿಗಳು, ಶಿಕ್ಷಕರು ಮತ್ತು ನಮಗೆಲ್ಲರಿಗೂ ಅತ್ಯಂತ ಖುಷಿಯಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಪಿಯುಸಿ ಸೀಟುಗಳ ಹೆಚ್ಚಳಕ್ಕೆ ಕ್ರಮ – ಸುರೇಶ್ ಕುಮಾರ್

blank

ಇಳಿಮುಖವಾದ ಕೊರೊನಾ – ಭಯ ಬೇಡ:
ನಾವು ಪರೀಕ್ಷೆ ಮಾಡಲು ಮುಂದಾದಾಗ ನಮ್ಮ ಮುಖ್ಯಮಂತ್ರಿಯವರು ಕೊರೊನಾ ಪ್ರಕರಣಗಳು ಕಡಿಮೆಯಾದರೆ ಮಾತ್ರವೇ ಪರೀಕ್ಷೆ ಮಾಡಲು ಮುಂದಾಗುತ್ತೇವೆ ಎಂದು ಹೇಳಿದಂತೆ ಈಗ ನಾವು ಪರೀಕ್ಷೆ ನಡೆಸಲು ಮುಂದಾಗಿದ್ದೇವೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಕಳೆದ ವರ್ಷ ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವಿಟಿ ದರ 13.2ರಷ್ಟಿದ್ದರೆ ಅದು ಈ ವರ್ಷ 1.7ರ ಆಸುಪಾಸಿನಲ್ಲಿದೆ, ಈ ಬಾರಿಯ ಪರೀಕ್ಷೆ ಕಳೆದ ಬಾರಿಯ ಪರೀಕ್ಷೆಗಿಂತ ಹೆಚ್ಚಿನ ಸುರಕ್ಷಿತ ವಾತಾವರಣದಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರಗಳು ದ್ವಿಗುಣವಾಗಿವೆ. ಪರೀಕ್ಷಾ ಕೊಠಡಿಗಳು ಮೂರು ಪಟ್ಟು ಹೆಚ್ಚಾಗಿವೆ. ಪ್ರಶ್ನೆ ಪತ್ರಿಕೆಗೆ ಉತ್ತರಿಸಲು ಸಾಕಷ್ಟು ಸಮಯಾವಕಾಶ ದೊರೆಯಲಿದೆ. ಕೇವಲ ಎರಡೇ ದಿನಗಳ ಕಾಲ ಪರೀಕ್ಷೆ ನಡೆಯುವುದರಿಂದ ಯಾವುದೇ ತೊಂದರೆಗೆ ಅವಕಾಶವೇ ಇಲ್ಲ. ರಾಜ್ಯದ ಎಲ್ಲ ಇಲಾಖೆಗಳ ಸಹಯೋಗದಲ್ಲಿ ಪರೀಕ್ಷೆ ನಡೆಯುತ್ತಿರುವುದರಿಂದ ಮತ್ತು ಪರೀಕ್ಷೆಗಳು ಸುರಕ್ಷಿತ ವಾತಾವರಣದಲ್ಲಿ ನಡೆಯುತ್ತಿರುವ ಕುರಿತು ನಮಗೆಲ್ಲಾ ಭರವಸೆಯಿದ್ದು ತಮ್ಮ ಪೋಷಕರು ನಮ್ಮನ್ನು ಧೈರ್ಯವಾಗಿ ಪರೀಕ್ಷೆಗೆ ಕಳಿಸಲು ಉತ್ಸುಕರಾಗಿದ್ದಾರೆಂದು ಮಕ್ಕಳು ಹೇಳಿದರು. ರಾಜ್ಯದ 34ಶೈಕ್ಷಣಿಕ ಜಿಲ್ಲೆಗಳ ಡಿಡಿಪಿಐ ಕಚೇರಿ ಮತ್ತು ಡಯಟ್ ಕೇಂದ್ರಗಳಲ್ಲಿ ಹಾಜರಿದ್ದ ಮಕ್ಕಳು ಸಚಿವರೊಂದಿಗೆ ಪರೀಕ್ಷೆ ಕುರಿತ ತಮ್ಮ ಶಂಕೆಗಳನ್ನು ನಿವಾರಿಸಿಕೊಂಡರು. 90 ಮಕ್ಕಳು ನೇರವಾಗಿ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಶೇ.98ರಷ್ಟು ಸಿಬ್ಬಂದಿ ವ್ಯಾಕ್ಸಿನೇಷನ್:
ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗುವ 1,33,926 ಸಿಬ್ಬಂದಿಗಳಲ್ಲಿ 1,30,522 ಮಂದಿ ಮೊದಲ ಡೋಸ್ ಕೊರೊನಾ ವ್ಯಾಕ್ಸಿನೇಷನ್ ಪಡೆದಿದ್ದಾರೆ. 48,938 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಶೇ. 98 ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ. 3404 ಮಂದಿ ಇನ್ನೆರೆಡು ದಿನಗಳಲ್ಲಿ ಲಸಿಕೆ ಪಡೆಯಲಿದ್ದಾರೆಂದು ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

blank

ಪರೀಕ್ಷೆ ನಡೆಸಲು ಯಾವುದೇ ರಹಸ್ಯ ಕಾರ್ಯಸೂಚಿ ಇಲ್ಲ:
ಪರೀಕ್ಷೆ ನಡೆಸುವುದು ಸರ್ಕಾರಕ್ಕೆ ಪ್ರತಿಷ್ಠೆ ಇಲ್ಲವೇ ಹಠದ ವಿಷಯವಲ್ಲ. ಪರೀಕ್ಷೆ ಕೈಬಿಡುವುದು ಯಾರಿಗೇ ಆಗಲಿ ಸುಲಭದ ಸಂಗತಿ. ಆದರೆ ನಾವು ನಮ್ಮ ಮಕ್ಕಳ ಭವಿಷ್ಯ ಮತ್ತು ಹಿತದೃಷ್ಟಿಯಿಂದ ಅವರ ಮುಂದಿನ ಶಿಕ್ಷಣ ಅಯ್ಕೆಯ ಅನುಕೂಲಕ್ಕಾಗಿ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಸಚಿವರು ಪುನರುಚ್ಚರಿಸಿದರು. ಪರೀಕ್ಷೆ ನಡೆಸುವುದರಲ್ಲಿ ಶಿಕ್ಷಣ ಇಲಾಖೆಯ ಯಾವುದೇ ರಹಸ್ಯ ಕಾರ್ಯಸೂಚಿಯೇನಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯದ ಆರೋಗ್ಯ ಇಲಾಖೆ ಮತ್ತು ರಾಜ್ಯದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನೀಡಿದ ನಿರ್ದೇಶನದ ಆಧಾರದಲ್ಲೇ ಅವರು ರೂಪಿಸಿದ ಎಸ್‍ಒಪಿಯನ್ವಯವೇ ಪರೀಕ್ಷೆ ನಡಯುತ್ತಿದೆ. ಅದಕ್ಕೆ ರಾಜ್ಯದ ಮುಖ್ಯಮಂತ್ರಿಯವರೂ ಅನುಮೋದನೆ ನೀಡಿದ್ದಾರೆಂದು ಸಚಿವರು ತಿಳಿಸಿದರು.ಇದನ್ನೂ ಓದಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸ್ಯಾನಿಟೈಸರ್, ಮಾಸ್ಕ್ ಕೊಡುಗೆ ಕೊಟ್ಟ ದಾನಿಗಳು

ಶೀಘ್ರವೇ ಕಾರ್ಯಪಡೆ ಕಾರ್ಯಾರಂಭ:
ಬರುವ ಶೈಕ್ಷಣಿಕ ವರ್ಷದಲ್ಲಿ ಕಲಿಕಾ ನಿರಂತರತೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವರದಿ ನೀಡಲು ಸಾಶಿಇ ಆಯುಕ್ತರ ನೇತೃತ್ವದಲ್ಲಿ ಶಿಕ್ಷಣ ತಜ್ಞರು, ಅಧಿಕಾರಿಗಳು, ಪೋಷಕರು, ಖಾಸಗಿ ವಿದ್ಯಾಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆ ರಚಿಸಲಾಗಿದ್ದು, ಶಿಕ್ಷಣದ ಮುಂದುವರಿಕೆ ಕುರಿತಂತೆ ಕ್ರಿಯಾಯೋಜನೆಯನ್ನು ರೂಪಿಸಲಿದೆ ಎಂದು ಸಚಿವರು ವಿವರಿಸಿದರು.

ಜುಲೈ ಕೊನೇ ವಾರದಲ್ಲಿ ಪಿಯುಸಿ ಫಲಿತಾಂಶ:
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಗಳನ್ನು ಜುಲೈ 20ರ ಆಸುಪಾಸಿನಲ್ಲಿ ಪ್ರಕಟಿಸಲಾಗುವುದು ಎಂದು ಸುರೇಶ್ ಕುಮಾರ್ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ತಿಳಿಸಿದರು. ಸಾಶಿಇ ಆಯುಕ್ತ ವಿ. ಅನ್ಬುಕುಮಾರ್, ಎಲ್ಲ ಜಿಲ್ಲೆಗಳ ಡಿಡಿಪಿಐಗಳು, ಡಯಟ್ ಪ್ರಾಚಾರ್ಯರು ಭಾಗವಹಿಸಿದ್ದರು.

The post ಪರೀಕ್ಷೆ ಬರೆಯಲು ಉತ್ಸುಕರಾಗಿದ್ದೇವೆ – ಸಚಿವರ ಸಂವಾದದಲ್ಲಿ ವಿದ್ಯಾರ್ಥಿಗಳ ಮನದಾಳದ ಮಾತು appeared first on Public TV.

Source: publictv.in

Source link