ನೂತನ ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ- ರಾಯಚೂರಿನಲ್ಲಿ ಪ್ರತಿಭಟನೆ

ರಾಯಚೂರು: ಜಿಲ್ಲೆಗೆ ಸಚಿವ ಸ್ಥಾನ ತಪ್ಪಿದ ಹಿನ್ನೆಲೆ ನಗರದಲ್ಲಿ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದವು. ಸಚಿವ ಸ್ಥಾನ ನೀಡುವಲ್ಲಿ ಕಲ್ಯಾಣ ಕರ್ನಾಟಕದವರನ್ನು ಕಡೆಗಣಿಸಲಾಗುತ್ತಿದೆ ಎಂದು ಕಿಡಿಕಾರಿದರು.

ನಗರದ ಟಿಪ್ಪುಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ಮಾಡಿ ಅಸಮಧಾನ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ನೂತನ ಸಚಿವ ಸಂಪುಟದಲ್ಲಿ ಇಡೀ ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಜಿಲ್ಲೆಗೆ ಸಚಿವ ಸ್ಥಾನ ನೀಡದೆ ಪ್ರತೀ ಬಾರಿ ಸರ್ಕಾರಗಳು ಅನ್ಯಾಯ ಮಾಡುತ್ತಿವೆ. ಕಾಂಗ್ರೆಸ್ ಸರ್ಕಾರವಿದ್ದಾಗ ಸಿದ್ದರಾಮಯ್ಯನವರ ಐದು ವರ್ಷದ ಆಡಳಿತದಲ್ಲಿ ಜಿಲ್ಲೆಗೆ ಮಂತ್ರಿ ಸ್ಥಾನ ಸಿಗಲಿಲ್ಲ. ಬೇರೆ ಜಿಲ್ಲೆಯವರೇ ಇಲ್ಲಿನ ಉಸ್ತುವಾರಿ ವಹಿಸಿಕೊಳ್ಳುತ್ತಿದ್ದಾರೆ. ಇದೀಗ ಬಸವರಾಜ್ ಬೊಮ್ಮಾಯಿಯವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆಯು ಹುಸಿಯಾಗಿದ್ದು, ಜಿಲ್ಲೆಯ ಜನರಿಗೆ ನಿರಾಶೆಯಾಗಿದೆ. ಎರಡನೇ ಬಾರಿ ನಡೆಯುವ ಸಚಿವ ಸಂಪುಟ ವಿಸ್ತರಣೆ ವೇಳೆಯಾದರೂ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.

Source: publictv.in Source link