ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅನುದಾನ ಬಿಡುಗಡೆಗೆ ಸಿಎಂ ಬೊಮ್ಮಾಯಿ ಸೂಚನೆ

ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅನುದಾನ ಬಿಡುಗಡೆಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ವಿವಿಧ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾಧ್ಯಮ ಅಕಾಡೆಮಿ ಸ್ಥಾಪನೆಯಾಗಿ ನಲವತ್ತು ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಅಕಾಡೆಮಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅನುದಾನದ ಅಗತ್ಯವಿದೆ ಎಂದು ನಿಯೋಗ ಸಿಎಂ ಬಳಿ ಮನವಿ ಸಲ್ಲಿಸಿತ್ತು.

ನಿಯೋಗದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಅನುದಾನ ಬಿಡುಗಡೆ ಮತ್ತು ಪತ್ರಕರ್ತರಿಗೆ ಪ್ರಶಸ್ತಿ ನೀಡಲು ದಿನಾಂಕ ನಿಗದಿಪಡಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ. ಪಿ.ಎಸ್.ಹರ್ಷ ಅವರಿಗೆ ಸೂಚಿಸಿ, ಪ್ರೆಸ್ ಕ್ಲಬ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಳದ ಕುರಿತಂತೆ ಇರುವ ವ್ಯಾಜ್ಯವನ್ನು ಇತ್ಯರ್ಥಗೊಳಿಸಲು ಬೆಂಗಳೂರು ಜಿಲ್ಲಾಧಿಕಾರಿಗಳು ಪರಿಶೀಲಿಸಿ ಮಾಹಿತಿ ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಅಕಾಡೆಮಿ ಸದಸ್ಯ ಶಿವಾನಂದ್ ತಗಡೂರು, ಅಕಾಡೆಮಿ ಸದಸ್ಯರು ಹಾಗೂ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

Source: newsfirstlive.com Source link