ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ ನಿಷೇಧ; ಸಿಡಿದೆದ್ದ ಪುಷ್ಪ ಬೆಳೆಗಾರರು, ಮಾರಾಟಗಾರರು

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ ನಿಷೇಧ; ಸಿಡಿದೆದ್ದ ಪುಷ್ಪ ಬೆಳೆಗಾರರು, ಮಾರಾಟಗಾರರು

ಬೆಂಗಳೂರು: ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿ ನಿಷೇದವನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ಪುಷ್ಪ ಬೆಳೆಗಾರರು ಹಾಗೂ ಮಾರಾಟಗಾರರ ಪ್ರತಿಭಟನೆ ನಡೆಸಿದ್ದಾರೆ.

ಕರೋನಾ ಸಂಕಷ್ಟದಿಂದ ಈಗತಾನೇ ಚೇತರಿಸಿಕೊಳ್ಳುತ್ತಿರುವ ರಾಜ್ಯದ ಪುಷ್ಪ ಬೆಳೆಗಾರ ರೈತರ ಮೇಲೆ ಸರ್ಕಾರ ಗಧಾಪ್ರಹಾರವನ್ನು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ ಇಂದು ನಗರದ ಅಂತರಾಷ್ಟ್ರೀಯ ಪುಷ್ಪ ಮಾರುಕಟ್ಟೆ ಹೆಬ್ಬಾಳದಲ್ಲಿ ಪ್ರತಿಭಟನೆ ನಡೆಸಿದೆ. ಈ ಕೂಡಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್‌ ಈ ಆದೇಶವನ್ನು ಈ ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

blank

ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಕ್ಷಿಣ ಭಾರತ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷರಾದ ಟಿ ಎಂ ಅರವಿಂದ್‌ ಮಾತನಾಡಿ, ಈ ಆದೇಶದಿಂದ ರಾಜ್ಯದ 7500 ಹೆಕ್ಟೇರ್‌ ಪ್ರದೇಶದಲ್ಲಿ ಪುಷ್ಪ ಕೃಷಿಯಲ್ಲಿ ತೊಡಗಿಕೊಂಡಿರುವ ಸಾವಿರಾರು ಜನ ರೈತರ ಕುಟುಂಬಗಳ ಮೇಲಿನ ಗಧಾಪ್ರಹಾರ ಮಾಡಿದಂತಾಗುತ್ತದೆ. ವರ್ಷಗಳಿಂದ ಯಾವುದೇ ಸಭೆ ಸಮಾರಂಭಗಳು ನಡೆಯದೇ ತೊಂದರೆಗೀಡಾಗಿದ್ದ ರೈತರು ಇನ್ನಷ್ಟು ಕಷ್ಟಕ್ಕೆ ಸಿಲುಕಿಕೊಂಡು ಆತ್ಮಹತ್ಯೆಯಂತಹ ದಾರಿಯನ್ನು ಕಂಡುಕೊಳ್ಳುವಂತಾಗಿದೆ. ಕೋಟ್ಯಾಂತರ ರೂಪಾಯಿಗಳ ಹಣವನ್ನು ತೊಡಗಿಸಿ ಪುಷ್ಪ ಕೃಷಿಯಲ್ಲಿ ತೊಡಗಿಕೊಂಡಿರುವರು ಬಹಳಷ್ಟು ಸಂಕಷ್ಟಕ್ಕೆ ಬೀಳುವಂತಾಗಿದೆ ಎಂದಿದ್ದಾರೆ.

blank

ಫ್ಲವರ್‌ ಕೌನ್ಸಿಲ್‌ ಆಫ್‌ ಇಂಡಿಯಾದ ಅಧ್ಯಕ್ಷರಾದ ಶ್ರೀಕಾಂತ್‌ ಬೊಲ್ಲಪಳ್ಳಿ ಮಾತನಾಡಿ, ಪುಷ್ಪ ಕೃಷಿ ಕ್ಷೇತ್ರ ಹೆಚ್ಚಿನ ಉದ್ಯೋಗಾವಕಾಶಗಳನ್ನು ನೀಡುತ್ತಿದೆ. 7500 ಹೆಕ್ಟೇರ್‌ ನಷ್ಟು ಭೂಮಿಯಲ್ಲಿ ಗ್ರೀನ್‌ ಹೌಸ್‌ ಮೂಲಕ ಪುಷ್ಪ ಕೃಷಿಯನ್ನು ನಡೆಸಲಾಗುತ್ತಿದೆ. ಬೆಂಗಳೂರಿನಿಂದ ದೇಶ ಹಾಗೂ ವಿದೇಶಕ್ಕೆ ಹೂಗಳು ರಫ್ತಾಗುತ್ತವೆ. ವಿದೇಶಿ ವಿನಿಮಯ ಹಾಗೂ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿರುವ ಪುಷ್ಪ ಕೃಷಿಗೆ ಈ ರೀತಿ ನಿಷೇಧ ಹೇರುವ ಮೂಲಕ ಹೊಡೆತ ನೀಡುವುದು ಸರಿಯಲ್ಲ ಎಂದು ಹೇಳಿದರು.

ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿಯನ್ನು ಹಿಡಿದುಕೊಂಡು ವಿನೂತನವಾಗಿ ನಡೆಸಿದ ಪ್ರತಿಭಟನೆಯಲ್ಲಿ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

 

Source: newsfirstlive.com Source link