ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ನಿಂದಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಸೋನಿಯಾ ಗಾಂಧಿ
ನವದೆಹಲಿ: ಕೊವಿಡ್ ಸೋಂಕಿಗೆ ತುತ್ತಾಗಿರುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಸ್ವಾತಂತ್ರ್ಯ ದಿನದ ಹಿನ್ನೆಲೆಯಲ್ಲಿ ನೀಡಿರುವ ತಮ್ಮ ಹೇಳಿಕೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ತನ್ನ ರಾಜಕೀಯ ಪ್ರಚಾರವನ್ನು ಹೆಚ್ಚಿಸಲು ನಾಯಕರಾದ ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು (Jawaharlal Nehru) ಅವರನ್ನು ಕೆಣಕಲು ಪ್ರಯತ್ನಿಸುತ್ತಿದೆ ಎಂದು ಸೋನಿಯಾ ಗಾಂಧಿ ಟೀಕಿಸಿದ್ದಾರೆ.
ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದೇಶಕ್ಕೆ ಶುಭ ಹಾರೈಸಿದ ಸೋನಿಯಾ ಗಾಂಧಿ, ಕಳೆದ 75 ವರ್ಷಗಳಲ್ಲಿ ಹೆಚ್ಚು ಪ್ರತಿಭಾವಂತ ಭಾರತೀಯರು ದೇಶವನ್ನು ವಿಜ್ಞಾನ, ಶಿಕ್ಷಣ, ಆರೋಗ್ಯ ಮತ್ತು ಮಾಹಿತಿ ಕ್ಷೇತ್ರಗಳಲ್ಲಿ ಪ್ರಗತಿಯ ಹಾದಿಯಲ್ಲಿ ಮುನ್ನಡೆಸಿದ್ದಾರೆ. ಭಾರತದ ದೂರದೃಷ್ಟಿಯ ನಾಯಕರು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣಾ ವ್ಯವಸ್ಥೆಯ ಅಡಿಪಾಯವನ್ನು ಹಾಕಿದರು. ಭಾರತವು ತನ್ನ ವೈವಿಧ್ಯಮಯ ಸಂಸ್ಕೃತಿ ಮತ್ತು ಭಾಷೆಗಳ ಮೂಲಕ ವೈಭವಯುತ ರಾಷ್ಟ್ರವಾಗಿ ತನ್ನ ಇಮೇಜನ್ನು ಭದ್ರಪಡಿಸಿಕೊಂಡಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ನಿಂದಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಮಾಡುವ ಇಂತಹ ಪ್ರಯತ್ನಗಳನ್ನು ಕಾಂಗ್ರೆಸ್ ಪಕ್ಷವು ಬಲವಾಗಿ ವಿರೋಧಿಸುತ್ತದೆ ಎಂದಿದ್ದಾರೆ. 1947ರಲ್ಲಿ ಭಾರತದ ವಿಭಜನೆಗೆ ಕಾರಣವಾದ ಘಟನೆಗಳ ಆವೃತ್ತಿಯನ್ನು ವಿವರಿಸುವ ವಿಡಿಯೋವನ್ನು ಬಿಜೆಪಿ ಬಿಡುಗಡೆ ಮಾಡಿದ ಬೆನ್ನಲ್ಲೇ ಸೋನಿಯಾ ಗಾಂಧಿ ಈ ವಾಗ್ದಾಳಿ ನಡೆಸಿದ್ದಾರೆ.