Weather Today: ಕರ್ನಾಟಕದಲ್ಲಿ ತಗ್ಗಿದ ಮಳೆ; ರಾಜಸ್ಥಾನ, ದೆಹಲಿ, ತಮಿಳುನಾಡಿನಲ್ಲಿ ಹಳದಿ ಅಲರ್ಟ್ ಘೋಷಣೆ | Weather Today Karnataka Rain IMD Issued Yellow Alert in Rajasthan, Madhya Pradesh Tamil Nadu Rains


Weather Today: ಕರ್ನಾಟಕದಲ್ಲಿ ತಗ್ಗಿದ ಮಳೆ; ರಾಜಸ್ಥಾನ, ದೆಹಲಿ, ತಮಿಳುನಾಡಿನಲ್ಲಿ ಹಳದಿ ಅಲರ್ಟ್ ಘೋಷಣೆ

ಮಳೆ

ಬೆಂಗಳೂರು: ಮಲೆನಾಡಿನ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗಿದೆ. ಇಂದಿನಿಂದ ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದರೂ ಲಡಾಖ್, ಜಮ್ಮು ಮತ್ತು ಕಾಶ್ಮೀರ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ, ಮಧ್ಯ, ಪೂರ್ವ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜಿನ ಸಾಧ್ಯತೆಯಿದೆ.

ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಈ ಬಾರಿ ಭಾರೀ ಮಳೆಯಾಗಿದೆ. ಇಂದಿನಿಂದ ಜ. 21ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಶುಕ್ರವಾರದವರೆಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ. ಶುಕ್ರವಾರ ಮತ್ತು ಶನಿವಾರದಂದು ಈ ಪ್ರದೇಶದಲ್ಲಿ ಮಿಂಚು ಮತ್ತು ಆಲಿಕಲ್ಲುಗಳೊಂದಿಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಇಂದಿನಿಂದ ಗುರುವಾರದವರೆಗೆ ಜಮ್ಮು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಮಳೆಯನ್ನು ನಿರೀಕ್ಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಇಂದಿನಿಂದ ಜನವರಿ 20ರವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನಲ್ಲಿ ಮಳೆಯನ್ನು ನಿರೀಕ್ಷಿಸಲಾಗಿದೆ. ಇಂದು ರಾಜಸ್ಥಾನ, ಉತ್ತರ ಪ್ರದೇಶ, ಜಮ್ಮು, ಹಿಮಾಚಲ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸುತ್ತದೆ.

ಮುಂದಿನ 24 ಗಂಟೆಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಚಳಿ ಗಾಳಿ ಬೀಸಲಿದೆ. ಹಾಗೇ, ಇಂದು ಉತ್ತರ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಚೆನ್ನೈ, ತಿರುವಳ್ಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರವು ತಿಳಿಸಿದೆ. ಚೆನ್ನೈ, ಚೆಂಗಲ್ಪಟ್ಟು, ರಾಣಿಪೇಟ್, ಕಾಂಚೀಪುರಂ, ವೆಲ್ಲೂರು, ಕಡಲೂರು, ವಿಲ್ಲುಪುರಂ, ತಿರುವರೂರ್, ತಂಜಾವೂರು, ನಾಗಪಟ್ಟಣಂ, ಮೈಲಾಡುತುರೈ ಮತ್ತು ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಇಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಶೀತ ಅಲೆಯ ಪರಿಸ್ಥಿತಿ ಇರಬಹುದೆಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

TV9 Kannada


Leave a Reply

Your email address will not be published. Required fields are marked *